Views: 3
ಮಡಿಕೇರಿ ಮೇ.27:-
ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಸಭೆಯು ಸೋಮವಾರ ನಡೆಯಿತು.
ನಗರದ ಉಪ ವಿಭಾಗಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವುದು, ಪ್ರವಾಹ ಪೀಡಿತ ಪ್ರದೇಶ ಹಾಗೂ ಭೂಕುಸಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದು ಮತ್ತಿತರ ಸಂಬಂಧ ಸುದೀರ್ಘ ಚರ್ಚೆ ನಡೆಯಿತು.
ಪ್ರತೀ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಜೊತೆಗೆ ಪ್ರತಿ ನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು ಎಂದು ವಿನಾಯಕ ನರ್ವಾಡೆ ಅವರು ಸೂಚಿಸಿದರು.
ಹಾಗೆಯೇ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಚಿತವಾಗಿ ಮಾಹಿತಿ ನೀಡಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ಉಪ ವಿಭಾಗಾಧಿಕಾರಿ ಅವರು ನಿರ್ದೇಶನ ನೀಡಿದರು.
ಮುಂಗಾರು ಸಂದರ್ಭದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದು ವಿನಾಯಕ ನರ್ವಾಡೆ ಅವರು ಹೇಳಿದರು.
ತಾಲ್ಲೂಕು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ರಮೇಶ್ ಬಾಬು, ನೋಡಲ್ ಅಧಿಕಾರಿಗಳಾದ ಶೇಖರ್, ಗಿರೀಶ್, ವಿನಯಕುಮಾರ್, ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ವಿರೂಪಾಕ್ಷ, ತಾಲ್ಲೂಕು ವೈದ್ಯಾಧಿಕಾರಿ ಚೇತನ್, ತಾ.ಪಂ.ಇಒ ನಾಗಮಣಿ, ಪೌರಾಯುಕ್ತರಾದ ವಿಜಯ್, ಸಿಡಿಪಿಒ ಸೀತಾಲಕ್ಷ್ಮಿ, ಕುಡಿಯುವ ನೀರು ವಿಭಾಗದ ಎಇಇ ಹರ್ಷದ್ ಪಾಷಾ, ಹೋಬಳಿ ಮಟ್ಟದ ಕಂದಾಯ ನಿರೀಕ್ಷಕರು ಇತರರು ಇದ್ದರು.