ಬೆಂಗಳೂರು, ಸೆಪ್ಟೆಂಬರ್ 15
ಬುದ್ದ, ಬಸವಣ್ಣ ಕಾಲದಲ್ಲೂ ಪ್ರಜಾಪ್ರಭುತ್ವದ ವ್ಯವಸ್ಥೆ ಇತ್ತು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಅರಣ್ಯ ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಸಂವಿಧಾನದ ಸಂಕ್ಷಣೆ ನಮ್ಮ ಕರ್ತವ್ಯ. ಪ್ರಜಾಪ್ರಭುತ್ವ ನಮ್ಮ ಉಸಿರಾಗಬೇಕು. ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
1949 ನವೆಂಬರ್ 25ರಂದು ಡಾ. ಬಾಬಾಸಹಾಹೇಬ್ ಅಂಬೇಡ್ಕರ್ ಅವರು ತಮ್ಮ ಭಾಷಣದಲ್ಲಿ ಸಮಾಜಿಕ, ಆರ್ಥಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಿದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥಬರುತ್ತದೆ ಎಂದು ತಿಳಿಸಿದ್ದಾರೆ. ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮ, ಭಾಷೆ, ಸಂಸ್ಕøತಿಗಳಿವೆ. ನಾವು ವೈವಿಧ್ಯತೆಯಲ್ಲಿ ಏಕತೆ ಕಾಣಬೇಕು. ಯಾವುದೇ ತಾರತಮ್ಯವಿರಬಾರದು. ಡಾ. ಬಾಬಾಸಹಾಹೇಬ್ ಅಂಬೇಡ್ಕರ್‍ಅವರು ತಿಳಿಸಿರುವಂತೆ ಯಾವುದೇ ಜಾತಿ, ಧರ್ಮ, ಭಾಷೆಗಳಲ್ಲಿ ಮೇಲು ಕೀಳು ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಸರ್ಕಾರವು ಸಮಾನತೆಯ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಡಾ. ಬಾಬಾಸಹಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ದೇಶದ ಸಂಪತ್ತು ಕೆಲವೇ ಜನರ ಕೈಯಲ್ಲಿ ಇರಬಾರದು. ಹಂಚಿಕೆಯಾದಾಗ ಮಾತ್ರ ಸಮಸಮಾಜ ನಿರ್ಮಾಣವಾಗುತ್ತದೆ. ಬುದ್ದ, ಬಸವ, ಶರಣರು ಸಮಸಮಾಜದ ಕನಸು ಕಂಡಿದ್ದರು. ಮಹಿಳೆಯರು, ಬಡವರು, ಶೋಷಿತ ವರ್ಗದವರಿಗೆ ಶಿಕ್ಷಣ ಹಾಗೂ ಆರ್ಥಿಕ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ 5 ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಗಿದೆ.
ಸಂವಿಧಾನದ ಪೀಠಿಕೆಯಲ್ಲಿ ಮೌಲ್ಯಗಳು ಇವೆ. ಸಂವಿಧಾನದ ಪೀಠಿಕೆ, ಸಂವಿಧಾನ ರಚಿಸಿದ ಉದ್ದೇಶ ತಿಳಿದವರು ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ. ಸಂವಿಧಾನದ ಪೀಠಿಕೆಯನ್ನು ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಓದಿಸಿ ಅರ್ಥೈಸುವ ಪ್ರಯತ್ನ ಮಾಡಲಾಗುತ್ತಿದೆ.
ವಿಚಿದ್ರಕಾರಕ ದುಷ್ಟ ಶಕ್ತಿಗಳು ಏಕತೆಯ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಮಾಜ ಒಡೆಯುವ ಶಕ್ತಿಗಳನ್ನು ಪ್ರಬಲವಾಗಲು ಬಿಡಬಾರದು ಎಂದು ತಿಳಿಸಿದರು.
ನಮ್ಮ ರಾಷ್ಟ್ರಗೀತೆ, ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯವಿಲ್ಲದ ಶಾಂತಿಯ ತೋಟವಾಗಬೇಕು ಎಂದು ನುಡಿದರು.
ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಅವರು ಮಾತನಾಡಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 2007 ರಲ್ಲಿ ಅಂಗೀಕರಿಸಿದ ನಿರ್ಣಯದಂತೆ 15 ನೇ ಸೆಪ್ಟೆಂಬರ್ ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು. ಈ ದಿನವು ಪ್ರಜಾಪ್ರಭುತ್ವದ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಜಾಗತಿಕವಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ವಿಶ್ವಸಂಸ್ಥೆ ಮತ್ತು ಇತರ ಅಂತರರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ, ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು, ಅದರ ಮೌಲ್ಯಗಳು ತತ್ವಗಳನ್ನು ಎತ್ತಿಹಿಡಿಯಲು ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ ಇಡೀ ಜಗತ್ತಿನಲ್ಲಿಯೇ ಶ್ರೇಷ್ಠವಾದ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ. ದೇಶದ ಸರ್ವೋತೋಮುಖ ಅಭಿವೃದ್ದಿಯಲ್ಲಿ ಸಂವಿಧಾನವು ದಾರಿದೀಪವಾಗಿದೆ. ಬೀದರ್ ನಿಂದ ಚಾಮರಾಜನಗರದವರೆಗಿನ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮವು ನಾವು ಪ್ರಜಾಪ್ರಭುತ್ವಕ್ಕೆ ನೀಡುವ ಗೌರವವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಿವಾಜಿನಗರದ ಶಾಸಕರಾದ ರಿಜ್ವಾನ್ ಅರ್ಷದ್, ಶಾಸಕರು, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಕೆ, ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ ವಿವಿಧ ನಿಗಮಗಳ ಅಧ್ಯಕ್ಷರು, ಗಣ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.