ಬೆಂಗಳೂರು ನಗರ ಜಿಲ್ಲೆ, ಜುಲೈ 19:
ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಬೇಡಿಕೆಯಂತೆ ಜಿಲ್ಲೆಯ ಪೂರ್ವ, ದಕ್ಷಿಣ ಹಾಗೂ ಅನೇಕಲ್ ತಾಲ್ಲೂಕುಗಳಲ್ಲಿ ತಲಾ 2 ಎಕರೆ ಭೂಮಿಯನ್ನು ಕ್ರೀಡಾಂಗಣ ನಿರ್ಮಿಸಲು ಒದಗಿಸುವಂತೆ ಸಂಬಂಧಪಟ್ಟ ತಹಶೀಲ್ದಾರರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ ದಯಾನಂದ ಅವರು ಸೂಚಿಸಿದರು.
ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾನ್ಯ ಮುಖ್ಯಮಂತ್ರಿಗಳು ಕಳೆದ ಮೂರು ತಿಂಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನು ಪರಿಶೀಲಿಸಲಿದ್ದು, ಈ ಕುರಿತು ಪ್ರಾದೇಶಿಕ ಆಯುಕ್ತರಿಗೆ ಸಂಪೂರ್ಣ ವರದಿಯನ್ನು ಒದಗಿಸಬೇಕಾಗಿರುತ್ತದೆ. ಅದ್ದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇ ಮಾಡಲು ಸೂಚಿಸಿದ ಅವರು ಬಾಕಿ ಉಳಿಸಿಕೊಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಾದೇಶಿಕ ಆಯುಕ್ತರು ಮತ್ತು ಕಾರ್ಯದರ್ಶಿಗಳು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿದ್ದು, ಜಿಲ್ಲಾ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಯಾವುದೇ ಲೋಪವಿಲ್ಲದಂತೆ ಎಚ್ಚರವಹಿಸಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕಾಂತರಾಜು, ಅಪರ ಜಿಲ್ಲಾಧಿಕಾರಿಗಳಾದ ಟಿ.ಎನ್ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ರವೀಂದ್ರನಾಥ್ ಎಂ. ಮೇಟಿ, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿಗಳಾದ ರಜನಿಕಾಂತ್ ಚೌಹಾಣ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.