ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಪಟ್ಟಿ ಮಾಡಬೇಕು. ನಂತರ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳ ಮಾಲೀಕರಿಗೆ ನೋಟೀಸ್ ಜಾರಿಗೊಳಿಸಿ ಸ್ವಚ್ಛತೆ ಮಾಡಿ ದಂಡ ವಿಧಿಸುವುದರ ಜೊತೆಗೆ ಮತ್ತೆ ಈ ರೀತಿ ಮರುಕಳಿಸದಂತೆ ಎಚ್ಚರಿಕೆ ನೀಡಬೇಕೆಂದು ಸೂಚಿಸಿದರು.
ಖಾಲಿ ನಿವೇಶನ/ಪ್ರದೇಶಗಳು ಆಸ್ತಿ ತೆರಿಗೆ ವ್ಯಾಪ್ತಿಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶಿಲಿಸಿ, ಆಸ್ತಿ ತೆರಿಗೆ ವ್ಯಾಪ್ತಿಗೆ ಬರದಿದ್ದಲ್ಲಿ ಕೂಡಲೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಂದು ಸೂಚಿಸಲಾಯಿತು.
ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಕಾನೂನು ಕ್ರಮ:
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಆಯಾ ವಲಯ ವ್ಯಾಪ್ತಿಯಲ್ಲಿರುವ ಮುದ್ರಣಾಲಯಗಳಿಗೆ ನೋಟೀಸ್ ನೀಡಿ ಯಾವುದೇ ಅನಧಿಕೃತ ಜಾಹೀರಾತು ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಉಲ್ಲಂಘಣೆ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಕಟ್ಟೆಚ್ಚರ ವಹಿಸಬೇಕೆಂದು ಸೂಚಿಸಿದರು.
ವೈಟ್ ಟಾಪಿಂಗ್ ಕಾಮಗಾರಿ ಕೂಡಲೆ ಪ್ರಾರಂಭಿಸಿ:
ನರದಲ್ಲಿ ಹೊಸದಾಗಿ ಕೈಗೆತ್ತಿಕೊಳ್ಳುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಸಂಚಾರಿ ಪೊಲೀಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾಮಗಾರಿಗಳ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಬೀದಿ ದೀಪ(Street Lights) ಗಳ ನಿರ್ವಹಣೆ ಸರಿಯಾಗಿರಲಿ:
ನಗರದಲ್ಲಿ ಬೀದಿ ದೀಪಗಳು ಸರಿಯಾಗಿ ನಿರ್ವಹಣೆ ಮಾಡಬೇಕು. ವಿದ್ಯುತ್ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5 ರಿಂದ ರಾತ್ರಿ 8.30 ಗಂಟೆಯವರೆಗೆ ಕಾರ್ಯನಿರ್ವಹಿಸಬೇಕಿದೆ. ಈ ಸಂಬಂಧ, ನಾಗರೀಕರು ‘ಸಹಾಯ’ದಲ್ಲಿ ನೀಡುವ ದೂರುಗಳನ್ನು ಕೂಡಲೆ ಸ್ಪಂದಿಸಿ ಬಗೆಹರಿಸಬೇಕು. ಬೀದಿ ದೀಪಗಳಿಲ್ಲದಿರುವ ಕಡೆ ಕೂಡಲೆ ಬೀದಿ ದೀಪಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದದರು.
ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಿ:
ಪಾಲಿಕೆ ವ್ಯಾಪ್ತಿಯಲ್ಲಿ ಸರಾಸರಿ 160 ರಿಂದ 170 ಪ್ರಕರಣಗಳು ಕಂಡುಬರುತ್ತಿದೆ. ಡೆಂಘೀ ಕುರಿತು ಪರೀಕ್ಷಾ ಪ್ರಮಾಣವನ್ನು ಹೆಚ್ಛಳ ಮಾಡಲಾಗಿದೆ. 600 ಫಾಗಿಂಗ್ ಯಂತ್ರ ಹಾಗೂ 618 ಸ್ಪ್ರೇಯರ್ ಗಳ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ವಿಶೇಷ ಆಯುಕ್ತರುಗಳಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರುಗಳಾದ ರಮೇಶ್, ಶಿವಾನಂದ್ ಕಪಾಶಿ, ಕರೀಗೌಡ, ರಮ್ಯಾ, ವಿನೋತ್ ಪ್ರಿಯಾ, ಪ್ರೀತಿ ಗೆಹ್ಲೋಟ್, ಪ್ರಧಾನ ಅಭಿಯಂತರರು, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.