ಬೆಂಗಳೂರು, ಆಗಸ್ಟ್ 30
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರ ಮತ್ತು ಸಮೂಹ ಮಾಧ್ಯಮಗಳು ಹಾಗೂ ಸಾರ್ವಜನಿಕರ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಿದ್ದು ಸರ್ಕಾರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸಚಿವಾಲಯಗಳು, ಇಲಾಖೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು, ಪ್ರಾಧಿಕಾರ, ನಿಗಮ, ಮಂಡಳಿಗಳು ಸರ್ಕಾರದ ಪ್ರಕಟಣೆಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಸುದ್ದಿ ಸಂಸ್ಥೆಗಳಿಗೆ ನೀಡಬೇಕಾಗಿದ್ದು, ಕೆಲವೊಂದು ಸಚಿವಾಲಯದ ಇಲಾಖೆಗಳು/ಅಧೀನ ಕಚೇರಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಮಾಧ್ಯಮ ಪ್ರಕಟಣೆಗೆ ನೀಡದೆ, ನೇರವಾಗಿ ಸುದ್ದಿ ಸಂಸ್ಥೆಗಳಿಗೆ ಕಳುಹಿಸಿಕೊಡುವುದನ್ನು ಗಮನಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ: 29-08-2024ರಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆ ಹೊರಡಿಸಿರುವ ದಿನಾಂಕದಿಂದ ಸರ್ಕಾರದ ವ್ಯಾಪ್ತಿಗೆ ಒಳಪಡುವ ಸಚಿವಾಲಯದ ಎಲ್ಲಾ ಇಲಾಖೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು, ಪ್ರಾಧಿಕಾರ, ನಿಗಮ, ಮಂಡಳಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಹಾಗೂ ಸಚಿವರುಗಳ ಸಚಿವಾಲಯ ಇವುಗಳೆಲ್ಲವೂ ರಾಜ್ಯದಲ್ಲಿನ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಮತ್ತು ಯೋಜನೆಗಳ ಕುರಿತು ಕಳುಹಿಸಿಕೊಡಲಾಗುವ ಮಾಧ್ಯಮ ಪ್ರಕಟಣೆಗಳು, ಸಭೆ ಮತ್ತು ಸಮಾರಂಭಗಳ ಮಾಹಿತಿಗಳು, ಆದೇಶಗಳು, ಸುತ್ತೋಲೆಗಳು, ಅಧಿಸೂಚನೆಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರವೇ ಸುದ್ದಿ ಸಂಸ್ಥೆಗಳಿಗೆ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಮಾಧ್ಯಮ ಪ್ರಕಟಣೆಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಇಮೇಲ್ ವಿಳಾಸ commissionerinformation@gmail.com ಮತ್ತು varthasoudhabengaluru@gmail.com ಕೊಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.